ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನದ ಅಂಗವಾಗಿ ‘ಸಮುದಾಯದತ್ತ ಸಾಂತ್ವನ ಸಂವಾದ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಸಾರ್ವಜನಿಕರಿಗೆ ಇಲಾಖೆಗಳ ಸೇವೆಗಳು ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಕಂದಾಯ ಇಲಾಖೆಯ ಗ್ರಾಮ ಸಹಾಯಕ ಬಾಲಕೃಷ್ಣ ಗೌಡ ಅವರು ಕಂದಾಯ ಇಲಾಖೆಯ ಸೇವೆಗಳು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿರುವ ಗೊಂದಲಗಳ ಕುರಿತು ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ಸೌಮ್ಯ ಅವರು ಆಯುಷ್ಮಾನ್ ಭಾರತ್ ಹಾಗೂ ಆಭಾ ಯೋಜನೆಗಳ ಉದ್ದೇಶ ಮತ್ತು ಪ್ರಯೋಜನಗಳ ಬಗ್ಗೆ ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಯಶೋಧ ಕೆ. ಅವರು ಇಲಾಖೆಯ ವಿವಿಧ ಸೇವೆಗಳು, ಹೊಸ ಯೋಜನೆಗಳು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಸರಕಾರಿ ಯೋಜನೆಗಳ ಕುರಿತು ಅರಿವು ಮೂಡಿಸಲಾಯಿತು.



