ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಅಭಿನಂದನೀಯ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ. ಅದೇ ರೀತಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಸೊರಕೆ ಹೇಳಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಸರ್ಕಾರ ಜನಪರ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಯೋಜನೆಗಳ ಪ್ರಯೋಜನವನ್ನು ಇನ್ನಷ್ಟು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ತಿಳಿಸಿದರು.



