ಸಂವಿಧಾನವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ ನೀಡುತ್ತಿದ್ದಾರೆ. ದೇಶದ ಇತಿಹಾಸದಲ್ಲೇ ಸುಪ್ರೀಂ ಕೋರ್ಟ್ಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆದಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್. ನವೀನ್ ಆರೋಪಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ ಎಂದು ಕಾಂಗ್ರೆಸ್ ಸರ್ಕಾರದ ಸಚಿವರೇ ಒಪ್ಪಿಕೊಂಡಿದ್ದಾರೆ. ಆದರೂ ರಾಹುಲ್ ಗಾಂಧಿ ಯಾವುದೇ ದಾಖಲೆಗಳಿಲ್ಲದೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಎಸ್ಐಆರ್ ಪ್ರಕ್ರಿಯೆಯ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಚುನಾವಣಾ ಆಯೋಗದ ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ರಾಹುಲ್ ಗಾಂಧಿ ನಡೆದುಕೊಳ್ಳುತ್ತಿದ್ದಾರೆ ಎಂದು ಕೆ.ಎಸ್. ನವೀನ್ ಟೀಕಿಸಿದರು.



