ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆಯಿದ್ದು, ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರು ಹಾಗೂ ವಿವಿಧ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಈ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡದೆ, ಮಿತವಾಗಿ ಹಾಗೂ ಜಾಗರೂಕತೆಯಿಂದ ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಬೇಕು. ಸ್ಥಳೀಯಾಡಳಿತ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಮೂಲಕ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಪೂರೈಕೆ ಹಾಗೂ ಸಂಬಂಧಿತ ಅಂದಾಜು ಕಾಮಗಾರಿಗಳ ವೆಚ್ಚಕ್ಕಾಗಿ ಜಿಲ್ಲಾಧಿಕಾರಿಗಳು ಮತ್ತು ತಾಲೂಕು ತಹಸೀಲ್ದಾರರ ಖಾತೆಗಳಲ್ಲಿ ಈಗಾಗಲೇ ಸಾಕಷ್ಟು ಅನುದಾನ ಲಭ್ಯವಿದೆ ಎಂದು ಸಚಿವರು ತಿಳಿಸಿದರು.
ಒಂದು ವೇಳೆ ಲಭ್ಯವಿರುವ ಅನುದಾನ ಸಾಲದಿದ್ದಲ್ಲಿ, ಹೆಚ್ಚುವರಿ ಹಣಕಾಸಿನ ಅಗತ್ಯದ ಕುರಿತು ತಕ್ಷಣ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಅನುದಾನ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.



