ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಶೇರಾ ಎಂಬಲ್ಲಿ ನಡೆದಿದೆ.

ಶೇರಾ ನಿವಾಸಿ ಪಿ. ನವೀನ (43) ಮೃತಪಟ್ಟವರು. ನ.9ರಂದು ಬೆಳಗ್ಗೆ ಪತ್ನಿಯೊಂದಿಗೆ ಜಗಳವಾಡಿದ ನವೀನ, ಪತ್ನಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದರು ಎನ್ನಲಾಗಿದೆ. ಬಳಿಕ ಪತ್ನಿ ಕಿರಿಯ ಮಗನನ್ನು ಮನೆಗೆ ಕಳುಹಿಸಿ, ತಂದೆ ಏನು ಮಾಡುತ್ತಿದ್ದಾರೆಂದು ನೋಡಿಕೊಂಡು ಬರುವಂತೆ ತಿಳಿಸಿದ್ದರು. ಅದರಂತೆ ಮನೆಗೆ ತೆರಳಿದ ಮಗನಿಗೆ ತಂದೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.
ತಕ್ಷಣ ತಾಯಿ, ಸಂಬಂಧಿಕರು ಹಾಗೂ ಮಗಳು ಸೇರಿ ನೇಣಿನ ಕುಣಿಕೆಯಿಂದ ನವೀನ ಅವರನ್ನು ಬಿಡಿಸಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೃತರು ವಿಪರೀತ ಮದ್ಯಪಾನದ ಚಟ ಹೊಂದಿದ್ದು, ಈ ಹಿಂದೆಯೂ ನಾಲ್ಕೈದು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಮಾನಸಿಕ ಖಿನ್ನತೆ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಸಾವಿನ ಬಗ್ಗೆ ಯಾವುದೇ ಸಂಶಯವಿಲ್ಲವೆಂದೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



