ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಗುರುವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಂಕಣ ರೈಲ್ವೆ ವಿಲೀನ ಪ್ರಕ್ರಿಯೆಯಲ್ಲಿರುವ ತಾಂತ್ರಿಕ ಅಡಚಣೆಗಳ ಕುರಿತು ಮಾಹಿತಿ ನೀಡಿದರು.
ಕೊಂಕಣ ರೈಲ್ವೆ ಕೇವಲ ಕೇಂದ್ರ ಸರ್ಕಾರದ ಸಂಸ್ಥೆಯಲ್ಲ. ಇದರಲ್ಲಿ ಕೇಂದ್ರ ಸರ್ಕಾರದ ಜೊತೆಗೆ ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳೂ ಷೇರು ಪಾಲುದಾರಿಕೆಯನ್ನು ಹೊಂದಿವೆ. ಹೀಗಾಗಿ ನಿಯಮಗಳ ಪ್ರಕಾರ, ಈ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ವಿಲೀನಕ್ಕೆ ಸಮ್ಮತಿ ಸೂಚಿಸಿದರೆ ಮಾತ್ರ ಮುಂದಿನ ಪ್ರಕ್ರಿಯೆ ಕೈಗೊಳ್ಳಲು ಸಾಧ್ಯ ಎಂದು ವಿವರಿಸಿದರು.
ಈಗಾಗಲೇ ನಾಲ್ಕೂ ರಾಜ್ಯ ಸರ್ಕಾರಗಳಿಗೆ ವಿಲೀನಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಲಾಗಿದೆ. ರಾಜ್ಯಗಳ ಒಪ್ಪಿಗೆ ದೊರೆತ ತಕ್ಷಣ ವಿಲೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟಪಡಿಸಿದರು.



