ಮಂಗಳೂರು: ಬೆಂಗಳೂರು, ಕರಾವಳಿ ಕರ್ನಾಟಕ ಹಾಗೂ ಗೋವಾವನ್ನು ಬೆಸೆಯುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಕೇಂದ್ರ ರೈಲ್ವೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ (ನ.13) ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು. ಈ ಮೂಲಕ ಬೆಂಗಳೂರು, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ಆಧುನಿಕ ಹಾಗೂ ವೇಗದ ರೈಲು ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆ ಸಾಕಾರಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, ಮಂಗಳೂರು-ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಬಹುಕಾಲದ ಕನಸಾಗಿತ್ತು. ಕಾಮಗಾರಿ ಅನುಷ್ಠಾನದ ವೇಳೆ ಹಲವು ಸವಾಲುಗಳು ಎದುರಾದರೂ ಅವುಗಳನ್ನು ಯಶಸ್ವಿಯಾಗಿ ನಿವಾರಿಸಿ ವಿದ್ಯುದೀಕೃತ ರೈಲು ಸಂಚಾರ ಆರಂಭಿಸಿರುವುದು ಸಂತಸದ ವಿಚಾರ ಎಂದರು. ತಾವು ಕೂಡ ವಿದ್ಯುದೀಕರಣಗೊಂಡ ರೈಲಿನಲ್ಲಿ ಪ್ರಯಾಣಿಸಲಿರುವುದಾಗಿ ತಿಳಿಸಿದ ಅವರು, ಯೋಜನೆ ಸಾಕಾರಗೊಳಿಸಲು ಶ್ರಮಿಸಿದ ರೈಲ್ವೆ ಅಧಿಕಾರಿಗಳನ್ನು ಅಭಿನಂದಿಸಿದರು.
ಮಂಗಳೂರು ಭಾಗದ ರೈಲ್ವೆ ವ್ಯವಸ್ಥೆಯನ್ನು ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಿದ ರೈಲ್ವೆ ಅಧಿಕಾರಿ ರಾಜೇಶ್ ಚಂದ್ರ ಅವರ ಕಾರ್ಯವನ್ನು ವಿಶೇಷವಾಗಿ ಶ್ಲಾಘಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಜನಪರ ಕಾಳಜಿ ಹಾಗೂ ರೈಲ್ವೆ ಅಭಿವೃದ್ಧಿಗಾಗಿ ನಡೆಸುತ್ತಿರುವ ಪ್ರಯತ್ನಗಳನ್ನೂ ಪ್ರಶಂಸಿಸಿದರು. ಗುಂಡ್ಮಿ ರೈಲು ನಿಲ್ದಾಣದ ಬೇಡಿಕೆ ಈಡೇರುವವರೆಗೂ ಅವರು ಸಮಾಧಾನಗೊಂಡಿರಲಿಲ್ಲ ಎಂದು ಸಚಿವರು ಸ್ಮರಿಸಿದರು.
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಾಕಿ ಇರುವ ಮೇಲ್ಸೇತುವೆ, ಕೆಳಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಮಂಗಳೂರು ಸೆಂಟ್ರಲ್ ನಿಲ್ದಾಣದ ಅಭಿವೃದ್ಧಿಗಾಗಿ 94 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಕರಾವಳಿ ಭಾಗದ ರೈಲ್ವೆ ಸಂಪರ್ಕ, ಮೂಲಸೌಕರ್ಯ ಹಾಗೂ ಪ್ರಯಾಣಿಕರ ಸೌಲಭ್ಯಗಳನ್ನು ಮತ್ತಷ್ಟು ಉನ್ನತೀಕರಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಕರಾವಳಿ ಜನತೆಗೆ ನೀಡಿದ ದೀಪಾವಳಿ ಉಡುಗೊರೆ ಇದಾಗಿದೆ. ಕರಾವಳಿ ಜನರ ಪಾಲಿಗೆ ಇದು ಐತಿಹಾಸಿಕ ದಿನ. ಪಶ್ಚಿಮ ಘಟ್ಟದ ಹಸಿರು ಪರಿಸರದ ನಡುವೆ ವಂದೇ ಭಾರತ್ ರೈಲು ಸಂಚರಿಸಲಿದೆ. ಈ ಯೋಜನೆ ಸಾಕಾರಗೊಳಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕರಾವಳಿ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮಂಗಳೂರಿನ ರೈಲ್ವೆ ಹಳಿಗಳು ಕೊಂಕಣ ರೈಲ್ವೆ, ದಕ್ಷಿಣ ರೈಲ್ವೆ ಹಾಗೂ ನೈಋತ್ಯ ರೈಲ್ವೆ ನಡುವೆ ಹಂಚಿಹೋಗಿದ್ದರಿಂದ ಕಾರ್ಯಾಚರಣೆಯಲ್ಲಿಯೂ ಗೊಂದಲಗಳಿದ್ದವು. ಇವೆಲ್ಲವನ್ನೂ ಒಂದೇ ವಿಭಾಗದಡಿ ತರಬೇಕು ಎಂಬ ಜನರ ಬಹುಕಾಲದ ಬೇಡಿಕೆ ಈಡೇರಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಯತ್ನದಿಂದ ಅದು ಸಾಕಾರಗೊಂಡಿದ್ದು, ರೈಲ್ವೆ ನಕ್ಷೆಯಲ್ಲಿ ಮಂಗಳೂರು ಆದ್ಯತೆಯ ವಲಯವಾಗಿ ಮೂಡಿಬಂದಿದೆ ಎಂದು ಹೇಳಿದರು.
ಮಂಗಳೂರು-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಮರುಚಾಲನೆ ನೀಡಿರುವುದು ಸಚಿವರ ಮತ್ತೊಂದು ಮಹತ್ವದ ನಿರ್ಧಾರವಾಗಿದೆ. ಸುಬ್ರಹ್ಮಣ್ಯ ರೋಡ್-ಸಕಲೇಶಪುರ ನಡುವಿನ ರೈಲು ಮಾರ್ಗದ ವಿದ್ಯುದೀಕರಣವನ್ನು ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ. ಸುಮಾರು 100 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಸುಬ್ರಹ್ಮಣ್ಯ ರೋಡ್ ನಿಲ್ದಾಣವನ್ನು ಅಮೃತ್ ಭಾರತ್ ಯೋಜನೆಯಡಿ 25 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿದೆ ಎಂದರು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ವೇಗ ದೊರೆತಿದೆ ಎಂದರು. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರಿನಿಂದ ಗೋವಾ ಹಾಗೂ ಬೆಂಗಳೂರಿಗೆ ವೇಗವಾಗಿ ತಲುಪುವ ಕರಾವಳಿ ಜನರ ಕನಸು ನನಸಾಗುತ್ತಿದೆ. ಪಾಂಡೇಶ್ವರ ರೈಲ್ವೆ ಕ್ರಾಸಿಂಗ್ ಸಮಸ್ಯೆ ಪರಿಹಾರಕ್ಕೆ ದೆಹಲಿಯಿಂದ ವಿಶೇಷ ತಂಡ ಕಳುಹಿಸುವುದಾಗಿ ಕೇಂದ್ರ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ, ಡಾ. ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಉಳಿಪಾಡಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ರೈಲ್ವೆ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಯಶವಂತಪುರದಿಂದ ಸಂಚರಿಸಲಿದ್ದು, ಸುಮಾರು 850 ಕಿ.ಮೀ. ಉದ್ದದ ಮಾರ್ಗದಲ್ಲಿ ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಮಂಗಳೂರು, ಉಡುಪಿ, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಮುರ್ಡೇಶ್ವರ, ಗೋಕರ್ಣ ರೋಡ್ ಹಾಗೂ ಕಾರವಾರ ಸೇರಿದಂತೆ ಪ್ರಮುಖ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲಿದೆ.
ಈ ರೈಲು ಸೇವೆಯಿಂದ ಬೆಂಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ದಕ್ಷಿಣ ಗೋವಾದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಕರಾವಳಿ ಕರ್ನಾಟಕ ಮತ್ತು ಗೋವಾದ ಪ್ರಮುಖ ಪ್ರವಾಸಿ ತಾಣಗಳ ನಡುವಿನ ಸಂಪರ್ಕ ಸುಧಾರಿಸುವುದರೊಂದಿಗೆ ಪ್ರವಾಸೋದ್ಯಮದ ಬೆಳವಣಿಗೆಗೂ ಈ ಸೇವೆ ಸಹಕಾರಿಯಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…
ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್…
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…