ಯುಎಇಯ ಏಕೈಕ ಹಾಗೂ ಪ್ರಪ್ರಥಮ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ತನ್ನ 11ನೇ ವರ್ಷದ ಸಂಭ್ರಮದಲ್ಲಿದೆ. ಈ ಪ್ರಯುಕ್ತ ಆಯೋಜಿಸಿರುವ ‘ದುಬೈ ಯಕ್ಷೋತ್ಸವ-2026’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ ಸಮಾರಂಭ ನ.15ರಂದು ದುಬೈಯ ಮ್ಯಾಂಚೆಸ್ಟರ್ ಪ್ಲಾಜಾ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಿತು.

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕದ ಸಹಯೋಗದಲ್ಲಿ ಡಿಸೆಂಬರ್ 20ರಂದು ಯಕ್ಷೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಮಾರಂಭದಲ್ಲಿ ಯುಎಇಯ ವಿವಿಧ ಕನ್ನಡ ಹಾಗೂ ತುಳು ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಮತ್ತು ಕಲಾಭಿಮಾನಿಗಳು ಭಾಗವಹಿಸಿದ್ದರು.

ಸಮಾರಂಭದಲ್ಲಿ ಮಾತನಾಡಿದ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಯಕ್ಷಗಾನವು ಕರಾವಳಿಯ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ವಿದೇಶದಲ್ಲಿಯೂ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯಕ್ಷಗಾನ ಅಭ್ಯಾಸ ಕೇಂದ್ರದ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು.

‘ದುಬೈ ಯಕ್ಷೋತ್ಸವ-2026’ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭರವಸೆ ವ್ಯಕ್ತಪಡಿಸಿದರು. ವಿದೇಶಿ ನೆಲದಲ್ಲಿ ಯಕ್ಷಗಾನ ಕಲೆಯ ಪ್ರಸಾರ ಹಾಗೂ ಮುಂದಿನ ಪೀಳಿಗೆಗೆ ಕಲೆಯನ್ನು ಪರಿಚಯಿಸುವ ಆಶಯದೊಂದಿಗೆ ಯಕ್ಷೋತ್ಸವ ಆಯೋಜಿಸಲಾಗುತ್ತಿದೆ.



