ವೆಲೆನ್ಸಿಯಾ ಚರ್ಚ್‌ನ ಧರ್ಮಗುರು ಸಿಪ್ರಿಯನ್ ಪಿಂಟೊ ಅವರನ್ನು ಮಂಗಳೂರು ಪೊಲೀಸರು ಎರಡನೇ ಬಾರಿಗೆ ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡನೇ ಪೋಕ್ಸೊ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಪೆರ್ಮನ್ನೂರು ಚರ್ಚ್‌ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಎಫ್‌ಐಆರ್ ದಾಖಲಾಗಿತ್ತು. ಈ ಹಿಂದೆ ವೆಲೆನ್ಸಿಯಾ ಚರ್ಚ್‌ನಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ಸಿಪ್ರಿಯನ್ ಪಿಂಟೊ ಅವರನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ಈ ಪ್ರಕರಣದಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
ಆದರೆ, ಜಾಮೀನು ದೊರೆತ ಬಳಿಕವೂ ಸಿಪ್ರಿಯನ್ ಪಿಂಟೊ ಅವರು ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವ ಪ್ರಕ್ರಿಯೆ ಮುಂದೂಡಲ್ಪಟ್ಟಿತ್ತು ಎನ್ನಲಾಗಿದೆ.
ಇದೀಗ ಎಸಿಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿಪ್ರಿಯನ್ ಪಿಂಟೊ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎರಡನೇ ಪೋಕ್ಸೊ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆಯಂತೆ ಮತ್ತೊಮ್ಮೆ ಬಂಧನ ನಡೆಸಲಾಗಿದೆ.
ಈ ಎರಡೂ ಪ್ರಕರಣಗಳ ತನಿಖೆಯ ಜವಾಬ್ದಾರಿಯನ್ನು ಎಸಿಪಿ ರವೀಶ್ ನಾಯ್ಕ್ ಅವರಿಗೆ ವಹಿಸಲಾಗಿದೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದು, ಆರೋಪಗಳ ಕುರಿತು ಕಾನೂನು ಪ್ರಕ್ರಿಯೆ ನಡೆಯುತ್ತಿದೆ.



