ಪಡುಅಲೆವೂರಿನ ಮನೆಯಿಂದ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರ ಮೃತದೇಹ ಮನೆಯ ಸಮೀಪದ ಖಾಸಗಿ ಜಾಗದಲ್ಲಿರುವ ಬಾವಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಮೃತರನ್ನು ಶಾಂತ ಶೆಟ್ಟಿಗಾರ್ತಿ ಎಂದು ಗುರುತಿಸಲಾಗಿದೆ.

ವೃದ್ಧೆ ನಾಪತ್ತೆಯಾಗಿರುವ ಕುರಿತು ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮನೆಯ ಸಮೀಪದ ಬಾವಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ನಾಗೇಶ್ ನೇತೃತ್ವದ ತಂಡ ಸುರಕ್ಷತಾ ಪರಿಕರಗಳನ್ನು ಬಳಸಿ ಬಾವಿಯ ಆಳದಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿತು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ವೃದ್ಧೆ ಮೃತಪಟ್ಟಿರುವುದನ್ನು ದೃಢಪಡಿಸಿದರು.



