ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 1,450 ಲೀಟರ್‌ಗೂ ಅಧಿಕ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಮೊದಲ ಪ್ರಕರಣದಲ್ಲಿ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 7.72 ಲಕ್ಷ ರೂಪಾಯಿ ಮೌಲ್ಯದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಎರಡು ಕಾರುಗಳಲ್ಲಿ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ಜಪ್ತಿ ಮಾಡಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ವಶಕ್ಕೆ ಪಡೆಯಲಾಗಿದೆ.

ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ. ಅಕ್ರಮ ಮದ್ಯ ದಾಸ್ತಾನು ಮತ್ತು ಸಾಗಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಬಕಾರಿ ಇಲಾಖೆ ಎಚ್ಚರಿಕೆ ನೀಡಿದೆ.



