ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಚನಾ ಫಲಕ ಹಾಗೂ ಪಾರ್ಕಿಂಗ್ ಲೈಟ್ ಅಳವಡಿಸದೆ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನ.24ರಂದು ಸಂಜೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನೆಹರು ನಗರದಲ್ಲಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಸಾಯಿಶ್ ಕುಲಾಲ್ ಎಂದು ಗುರುತಿಸಲಾಗಿದೆ. ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ಸಾಗುವ ಏಕಮುಖ ರಸ್ತೆಯಲ್ಲಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಇದೇ ಮಾರ್ಗವಾಗಿ ಬಂದ ಬೈಕ್ ಸವಾರನಿಗೆ ನಿಂತಿದ್ದ ಲಾರಿ ಗಮನಕ್ಕೆ ಬಾರದೆ ಅದರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ತೀವ್ರತೆಗೆ ಸವಾರನ ತಲೆ ಹಾಗೂ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



