ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದು ಕೊಡುವಲ್ಲಿ “ಗ್ಯಾರಂಟಿ” ಯೋಜನೆಗಳು ಮಹತ್ತರ ಪಾತ್ರ ವಹಿಸಿದೆ ಎಂದು ಹೇಳಿದರೆ ತಪ್ಪಾಗಲಾರದು. 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಸೇವೆ ಅಭೂತಪೂರ್ವ ಸ್ವಾಗತ ಪಡೆಯಿತು. ಇನ್ನು ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಗೃಹಜ್ಯೋತಿ’ ಯೋಜನೆಗೆ ರಾಜ್ಯ ಮಟ್ಟದಲ್ಲಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಈ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.11ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಸರಕಾರವು ತನ್ನ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿದಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿದೆ. ಜನರ ಹಣವನ್ನು ಜನರಿಗೆ ನೀಡುವ ಮೂಲಕ ಜನರಿಗೆ ಶಕ್ತಿಯನ್ನು ನೀಡುವ ಕೆಲಸವನ್ನು ಸರಕಾರ ಮಾಡಿದೆ. ನೋಂದಣಿ ಮಾಡಿದ ಎಲ್ಲಾ ಅರ್ಹರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದರು.

5 ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯು ರಾಜೀವ್ ಗಾಂಧಿ ಅವರ ಹುಟ್ಟುಹಬ್ಬದ ದಿನದಂದು ಜಾರಿಗೆ ಬರಲಿದೆ ಎಂದು ತಿಳಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್ ಕೆ. ಮತ್ತು ಮೆಸ್ಕಾಂ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.




