ಆಂಧ್ರಪ್ರದೇಶ: ದಿಢೀರ್ ಬೆಳವಣಿಗೆಯೊಂದರಲ್ಲಿ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನಂಧ್ಯಾಲದಲ್ಲಿರುವ ಆರ್.ಕೆ. ಫಂಕ್ಷನ್ ಹಾಲ್ ಗೆ ಸೆ. 9ರ ಬೆಳಗಿನ ಜಾವ ಸುಮಾರು 3 ಗಂಟೆಗೆ ಆಗಮಿಸಿದ ದೊಡ್ಡ ಪೊಲೀಸ್ ಪಡೆಯು, ಫಂಕ್ಷನ್ ಹಾಲ್ ನಲ್ಲಿದ್ದ ಚಂದ್ರಬಾಬು ನಾಯ್ಡು ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಸ್ಕಿಲ್ ಹಗರಣದ ಪ್ರಮುಖ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿನ್ನೆ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಬಂಧನಗಳನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ. ನಾಯ್ಡುವರನ್ನು ನಂಧ್ಯಾಲ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಸೆ. 9ರಂದೇ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.



