ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಾರು ಡಿಕ್ಕಿಯಾಗಿ ಬುಲೆಟ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಸ್ಥಳದಲ್ಲೇ ಮೃತಾಪಟ್ಟಿದ್ದು, ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮೃತರನ್ನು ಕೇರಳ ರಾಜ್ಯದ ಬಾಕ್ರಬೈಲು ಪಾತೂರು ನಿವಾಸಿ ಪ್ರೀತಿಕಾ ಶೆಟ್ಟಿ ಎಂದು ಗುರುತಿಸಲಾಗಿದ್ದು, ಗಾಯಾಳು ಬುಲೆಟ್ ಸವಾರನನ್ನು ಬಂಟ್ವಾಳ ತಾಲೂಕು ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ ಎಂದು ತಿಳಿದು ಬಂದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬುಲೆಟ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಹೋಂಡಾ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಬುಲೆಟ್ ನ್ನು ಕಾರು ದೂಡಿಕೊಂಡು ಹೋಗಿದ್ದು, ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ಆಯ ತಪ್ಪಿ ಬಿದ್ದ ಪರಿಣಾಮ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದೆ. ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗಲೇ ವೇಳೆ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಅಪಘಾತದಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಗೊಂಡಿದ್ದ, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಪಘಾತಕ್ಕೀಡಾದ ಎರಡು ವಾಹನಗಳನ್ನು ತೆರವುಗೊಳಿಸಿದ್ದಾರೆ. ಇನ್ನೂ ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಎಸಿಪಿ ಗೀತಾ ಕುಲಕರ್ಣಿ, ಇನ್ಸ್ಪೆಕ್ಟರ್ ಶರೀಫ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಅಗಲೀಕರಣಗೊಂಡ ಬಳಿಕ ಬಪ್ಪನಾಡು , ಮುಲ್ಕಿ ಬಸ್ ನಿಲ್ದಾಣ, ವಿಜಯ ಸನ್ನಿಧಿ ಜಂಕ್ಷನ್ ಬಳಿ ಅವೈಜ್ಞಾನಿಕ ಕಾಮಗಾರಿಯಿಂದ ಅನೇಕ ಅಪಘಾತಗಳು ಸಂಭವಿಸಿದ್ದು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲೇ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.



