ಕರಾವಳಿ ಹೋಟೆಲ್ ನ ಆವರಣದಲ್ಲಿ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಉಡುಪಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ವೈದ್ಯರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮೃತದೇಹವನ್ನು ಕೆಎಂಸಿ ಶವಾಗಾರಕ್ಕೆ ಸಾಗಿಸಲು ಸಮಾಜ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರು ಇಲಾಖೆಗೆ ಸಹಕರಿಸಿದರು.
ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಹಾಗೂ ರಾಮದಾಸ್ ಪಾಲನ್ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದಾರೆ.



